ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆಯೇ ಪಾಸ್: ದ್ವಿತೀಯ ಪಿಯು ಮಕ್ಕಳ ಕಥೆಯೇನು..?

Updated: Tuesday, May 4, 2021, 19:29 [IST]

ರಾಜ್ಯದಲ್ಲಿ ಕೊರೋನಾ ಪ್ರಕರಣ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ. ಜೊತೆಗೆ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಅಂತ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.   

ಈ ಬಗ್ಗೆ ಇಂದು ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಮಾತನಾಡಿದ ಸಚಿವ ಸುರೇಶ್ ಕುಮಾರ್, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು. ಕೊರೊನಾ ಹರಡುವಿಕೆ ಪ್ರಮಾಣ ಇನಿದ ನಂತರ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು. ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ವಿದ್ಯಾಭ್ಯಾಸವನ್ನು ಮುಂದುವರೆಸಬೇಕೆಂದು ಮನವಿ ಮಾಡಿದರು.

ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್-19 ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಅಂದರೆ ಎರಡನೇ ವರ್ಷಕ್ಕೆ ತೇರ್ಗಡೆ ಮಾಡುವ ನಿರ್ಧಾರವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಇದೇ ಮೇ 24 ರಿಂದ ಜೂನ್​ 16ವರೆಗೆ ಪರೀಕ್ಷೆ ನಿಗದಿಯಾಗಿತ್ತು. ಸುಮಾರು 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ರಾಜ್ಯದಲ್ಲಿ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನಲೆ ಪರೀಕ್ಷೆಯನ್ನು ಮುಂದೂಡಿ ಆದೇಶ ಕೈ ಗೊಳ್ಳಲಾಗಿದೆ.*