ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ ಎಂದ ಎಚ್‌ಡಿಕೆ..! ರಾಮ ಮಂದಿರದ ದೇಣಿಗೆ ಬಗ್ಗೆ ಹೇಳಿದ್ದೇನು

Updated: Wednesday, February 17, 2021, 12:42 [IST]

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿಯವರು ರಾಮಮಂದಿರದ ದೇಣಿಗೆ ವಿಚಾರವಾಗಿ ಕೊಟ್ಟಿದ್ದ ಹೇಳಿಕೆ ವಿವಾದ ಇದೀಗ ಸ್ವರೂಪ ಪಡೆದಿದೆ. ಇದೆ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ 'ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ' ಎಂಬುದಾಗಿ ಹೇಳಿದ್ದಾರೆ...ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಕ್ಕೆ ದೇಣಿಗೆ ಸಂಗ್ರಹ ಮಾಡುತ್ತಿರುವ ವೇಳೆಯಲ್ಲಿ 'ಮನೆಗಳ ಗುರುತು ಮಾಡಲಾಗುತ್ತಿದೆ' ಎನ್ನುವ ಹೇಳಿಕೆಯನ್ನ ಎಚ್‌ಡಿ ಕುಮಾರಸ್ವಾಮಿಯವರು ಮತ್ತೆ ಸಮರ್ಥಿಸಿಕೊಂಡಿದ್ದಾರೆ.. ಇದೆ ಹಿನ್ನೆಲೆಯಲ್ಲಿ ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಹೇಳಿಕೆಗೆ ವ್ಯಕ್ತವಾಗುತ್ತಿರುವ ವಿರೋಧಕ್ಕೆ ಇದೀಗ ಸರಣಿ ಟ್ವಿಟ್ ಮಾಡಿ ತಿರುಗೇಟು ನೀಡಿದ್ದಾರೆ.  

Advertisement

ರಾಮಮಂದಿರಕ್ಕೆ ಹಣ ನೀಡದವರ ಮನೆಯ ಗುರುತು, ಮತ್ತು ಭವಿಷ್ಯದ ಬಗ್ಗೆ ಹೆಚ್ಡಿಕೆ ಆತಂಕ ವ್ಯಕ್ತಪಡಿಸಿದ್ದಾರೆ "ಈ ವಿಚಾರವಾಗಿ ಮಕ್ಕಳು-ಮರಿಗಳಿಗೆ,ಅಪ್ಪನ ಅಧಿಕಾರದ ಹಿಂದೆ ಅಡಗಿ ದುಡ್ಡು ಕೊಳ್ಳೆ ಹೊಡೆಯುತ್ತಿರುವ ಸ್ವಘೋಷಿತ ನವ ಇಲಿಗಳಿಗೆ ನಾನು ಪ್ರತಿಕ್ರಿಯಿಸಲಾರೆ. ಇಷ್ಟು ಹೇಳಿಯೂ ಅರ್ಥವಾಗದವರಿಗೆ ಹೇಳುವುದು ಇಷ್ಟೆ-ರಾಮಮಂದಿರ ಹಿಂದೂಗಳ ಭಕ್ತಿ,ಭಾವನೆಗಳ ಮೂರ್ತ ರೂಪ ಅದು ಆಗಬೇಕು. ಆದರೆ ಅದೇ ಹೆಸರಿನಲ್ಲಿ ನಡೆಯುತ್ತಿರುವ ವಿಭಜನೆಗೆ ನನ್ನ ವಿರೋಧವಿದೆ" ಎಂದು ಕುಮಾರಸ್ವಾಮಿ ಹೇಳಿಕೆ ನೀಡಿ ಸ್ಪಷ್ಟಪಡಿಸಿದ್ದಾರೆ.

"ಇತಿಹಾಸ ಹೇಳುತ್ತಾ ನಿಂತಿರುವ ಪುರಾತನ ದೇಗುಲಗಳ ಹಿಂದೆ ಜನರನ್ನು ವಿಭಜಿಸಿದ ಕತೆಗಳಿಲ್ಲ. ಆ ದೇಗುಲಗಳ ನಿರ್ಮಾಣಕ್ಕಾಗಿ ದೇಣಿಗೆ ಹೆಸರಿನಲ್ಲಿ ಹಣ ಸಂಗ್ರಹಿಸಿದ ಉಲ್ಲೇಖವಿಲ್ಲ. ದೇವರನ್ನು ರಾಜಕೀಯಕ್ಕಾಗಿ ಉಪಯೋಗಿಸಿಕೊಂಡ ಉಲ್ಲೇಖವಿರುವ ಒಂದೇ ಒಂದು ಶಾಸನ ನಮಗೆ ಸಿಕ್ಕಿಲ್ಲ. ಈಗ ಇಂಥ ಕೃತ್ಯ ಮಾಡುತ್ತಿರುವವರು ದಯವಿಟ್ಟು ನಿಲ್ಲಿಸಿ, ಎಂದು ಹೇಳುವ ಮೂಲಕ ಆಗ್ರಹಿಸಿದ್ದಾರೆ...  

Advertisement

"ಪಬ್ಲಿಸಿಟಿಗೆ ನಾನು ಈ ಹೇಳಿಕೆ ಕೊಟ್ಟಿದ್ದೇನೆ ಎಂದು ಸೋದರ ಶ್ರೀರಾಮುಲು ಹೇಳಿದ್ದಾರೆ. ಪಾಪ ಅವರು ಮುಗ್ಧರು. ದೈವಬಲ, ಜನಾಶಿರ್ವಾದದಿಂದ 2 ಬಾರಿ ಸಿಎಂ ಆದ ನಾನು ಇನ್ನು ಯಾವ ಪಬ್ಲಿಸಿಟಿ ಪಡೆಯಬೇಕಿದೆ? ನನಗೆ ಅದರ ಅಗತ್ಯವೇನಿದೆ? ರಾಮ ಮಂದಿರ ಆಗಬೇಕೆಂದು ಕುಮಾರಸ್ವಾಮಿ ಅವರ ಮನಸ್ಸಲ್ಲೂ ಇದೆ ಎಂಬ ಅವರ ಮಾತನ್ನು ಮಾತ್ರ ಅನುಮೋದಿಸುತ್ತೇನೆ, ಆಗಾಗ್ಗೆ ಈ ಮಾತನ್ನ ಹೇಳುತ್ತಿರುತ್ತೇನೆ. ನಮ್ಮ ನಡುವಿನ ನಿಷ್ಕಪಟ, ಕಳಂಕವಿಲ್ಲದ ಜಾತ್ಯತೀತವಾದಿ ದೇವೇಗೌಡರು. ತಮ್ಮ ಧರ್ಮದ ಬಗ್ಗೆ ಆಳವಾದ ನಂಬಿಕೆ ಇದ್ದೂ, ಪರಧರ್ಮದ ಬಗ್ಗೆ ಅಪಾರ ಗೌರವ ಉಳ್ಳವರವರು. ಅವರಷ್ಟು ದೈವತ್ವ ನಂಬಿದವರು, ದೇಗುಲ ನೋಡಿದವರು ಇನ್ನೊಬ್ಬರಿಲ್ಲ. ದೈವದ ಮೇಲೆ ನಮ್ಮ ಕುಟುಂಬಕ್ಕಿರುವ ನಂಬಿಕೆ ಪ್ರಶ್ನಿಸುವವರು ಮೂರ್ಖರು, ಒಬ್ಬರು ಹೇಳಿದ್ದಾರೆ, ಶ್ರೀರಾಮನ ಮೇಲೆ ನಂಬಿಕೆ ಇದ್ದರೆ ಕುಮಾರಸ್ವಾಮಿ ದೇಣಿಗೆ ನೀಡಲಿ ಎಂದು. 

ಹಣವನ್ನ ದೇಣಿಗೆ ನೀಡಿ ಶ್ರೀರಾಮನನ್ನು ಕುರುಡು ಕುರುಡಾಗಿ ಆರಾಧಿಸುವ ಭಕ್ತ ನಾನಲ್ಲ. ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ. ನಮ್ಮೆಲ್ಲರ ಭಕ್ತಿ, ಭಾವನೆಗಳನ್ನು ಹಣವಾಗಿ, ಅಧಿಕಾರವಾಗಿ ಪರಿವರ್ತಿಸುವ ನಿಮ್ಮ ನಡವಳಿಕೆ ತಿದ್ದಿಕೊಳ್ಳಿ" ಎಂದು ಹೇಳುತ್ತಾ ಪರೋಕ್ಷವಾಗಿ ಎಂಪಿ ರೇಣುಕಾಚಾರ್ಯ ಅವರಿಗೆ ತಿರುಗೇಟನ್ನು ಕೊಟ್ಟಿದ್ದಾರೆ.. "ನನ್ನ ಹೇಳಿಕೆಯಲ್ಲಿ ಬೇಜವಾಬ್ದಾರಿ ಗುರುತಿಸಿರುವ ಧಾರ್ಮಿಕ ಮುಖಂಡರೊಬ್ಬರು ಮೊದಲು ತಮ್ಮ ಜವಾಬ್ದಾರಿ ಅರಿಯಬೇಕು. ರಾಮನ ಭಕ್ತಿಯು ಹಣ,ಅಧಿಕಾರ,ರಾಜಕಾರಣವಾಗಿ ಪರಿವರ್ತನೆಯಾಗುವುದನ್ನು ಅವರು ತಡೆದಿದ್ದರೆ,ಅದು ಅವರ ಜವಾಬ್ದಾರಿಯ ಸಮರ್ಥ ನಿರ್ವಹಣೆ ಆಗಿರುತ್ತಿತ್ತು.ಅದು ಬಿಟ್ಟು ರಾಜಕೀಯದ ಹೇಳಿಕೆ ನೀಡುವುದು ಧಾರ್ಮಿಕ ನಾಯಕರಿಗೆ ಶೋಭೆಯಲ್ಲ" ಎಂದು ಹೇಳಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ..  

Advertisement

"ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು, ಕೆಲ ದಿನಗಳ ಹಿಂದೆ ಹೇಳಿಕೆ ನೀಡಿದ್ದು, ಇವರ ಈ ಹೇಳಿಕೆಗೆ ಬಿಜೆಪಿ ಮತ್ತು ಸಂಘ ಪರಿವಾರ ವಿರೋಧವನ್ನ ವ್ಯಕ್ತಪಡಿಸಿತ್ತು...